
ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಮತ್ತೆ ದುರಂತ ಸಂಭವಿಸಿದ್ದು, ಹಿಂದೂಪರ ಸಂಘಟನೆಯ ಕಾರ್ಯಕರ್ತ ಮತ್ತು ರೌಡಿಶೀಟರ್ ಸುಹಾಸ್ ಶೆಟ್ಟಿ (Suhas Shetty) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆಯು ಗುರುವಾರ ರಾತ್ರಿ ಸುಮಾರು 8.27ರ ಸುಮಾರಿಗೆ ಮಂಗಳೂರಿನ (Mangalore) ಹೊರವಲಯದ ಬಜ್ಪೆ (Bajpe) ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ನಡೆದಿದೆ.
2022ರಲ್ಲಿ ಸುರತ್ಕಲ್ನಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಬಜರಂಗದಳದ ಮಾಜಿ ಕಾರ್ಯಕರ್ತನಾಗಿದ್ದ. ಆತನ ವಿರುದ್ಧ ಈ ಹಿಂದೆ ಹಲವು ಕೊಲೆ ಯತ್ನ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರು ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯ ಮುಂದೆ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪೊಲೀಸರ ಮಾಹಿತಿ:
ಘಟನೆಯ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, “ಈ ಘಟನೆ ರಾತ್ರಿ 8.27ರ ಸುಮಾರಿಗೆ ನಡೆದಿದೆ. ಸುಹಾಸ್ ಶೆಟ್ಟಿ ಅವರು ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಮತ್ತು ಶಶಾಂಕ್ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ವಿಫ್ಟ್ ಮತ್ತು ಪಿಕಪ್ ವಾಹನಗಳಲ್ಲಿ ಬಂದ 5-6 ಜನರಿದ್ದ ದುಷ್ಕರ್ಮಿಗಳ ಗುಂಪು ಅವರನ್ನು ಅಡ್ಡಗಟ್ಟಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರಿಂದ ಸುಹಾಸ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಎ.ಜೆ. ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ” ಎಂದು ತಿಳಿಸಿದರು.
ಇದನ್ನೂ ಓದಿ: ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಕ್ಕೆ ನಡೆಯಿತಾ ಕೊಲೆ?
ಮುಂಜಾಗ್ರತಾ ಕ್ರಮ:
ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಮಂಗಳೂರಿನಾದ್ಯಂತ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿಯಿಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ನಗರಕ್ಕೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೊಲೆಯಾದ ಸುಹಾಸ್ ಸ್ಥಳೀಯವಾಗಿ ದೊಡ್ಡ ಕಾರ್ಯಕರ್ತರ ಪಡೆಯನ್ನು ಹೊಂದಿದ್ದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಫಾಜಿಲ್ ಕೊಲೆ ಪ್ರಕರಣದ ಹಿನ್ನೆಲೆ:
2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದಕ್ಕೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್ನಲ್ಲಿ ಫಾಜಿಲ್ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು.
ಪೊಲೀಸ್ ತನಿಖೆಯ ಪ್ರಕಾರ, ಸುಹಾಸ್ ಶೆಟ್ಟಿ ಮತ್ತು ಇತರ ಆರೋಪಿಗಳು ಫಾಜಿಲ್ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ಅವರು ದೂರವಾಣಿ ಸಂಭಾಷಣೆ ನಡೆಸಿದ್ದು, ಕೃತ್ಯಕ್ಕೆ ಬೇಕಾದ ವಾಹನ ಮತ್ತು ಮಾರಕಾಸ್ತ್ರಗಳನ್ನು ಸಿದ್ಧಪಡಿಸಿಕೊಂಡಿದ್ದರು. ಫಾಜಿಲ್ನ ಚಲನವಲನಗಳ ಮೇಲೆ ನಿಗಾ ಇರಿಸಿ, ಸಂಜೆ ಆರು ಮಂದಿ ಕಾರಿನಲ್ಲಿ ಬಂದು ಕಾಯ್ದು, ಫಾಜಿಲ್ ಕಾಣಿಸಿಕೊಂಡ ತಕ್ಷಣ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು.
ಇದೀಗ ಅದೇ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವುದು ಮಂಗಳೂರಿನಲ್ಲಿ ಮತ್ತೆ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಈ ಕೊಲೆಗೆ ಕಾರಣವೇನು ಮತ್ತು ಆರೋಪಿಗಳು ಯಾರು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.